Skip to main content


ಮೊದಲು ಬೇಷರತ್ ಬೆಂಬಲ ನೀಡಿ ಈಗ 30-30 ಖ್ಯಾತೆ ತೆಗೆದ ಕಾಂಗ್ರೆಸ್..!

ಜೆಡಿಎಸ್‍ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಒಂದೊಂದೇ ಷರತ್ತುಗಳನ್ನು ವಿಧಿಸಲು ಮುಂದಾಗಿದೆ. 30-30 ತಿಂಗಳು ಅಧಿಕಾರ ಹಂಚಿಕೆಯ ಪ್ರಸ್ತಾಪವನ್ನು ಕಾಂಗ್ರೆಸ್ ಮುಂದಿಟ್ಟಿರುವುದು ಕೇಳಿ ಬಂದಿದೆ. ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಅತಂತ್ರ ಪರಿಸ್ಥಿತಿ ನಿರ್ಮಾಣವಾದಾಗ ಮೈತ್ರಿ ಸರ್ಕಾರ ರಚಿಸಲು ಕಾಂಗ್ರೆಸ್-ಜೆಡಿಎಸ್ ಮುಂದಾಗಿ ಜೆಡಿಎಸ್‍ಗೆ ಬೇಷರತ್ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನಿಸಿತ್ತು.

ಅದರಂತೆ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧಿಕಾರ ಸ್ವೀಕರಿಸಿದ್ದರು. ಈಗ ಸಂಪುಟ ವಿಸ್ತರಣೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನವದೆಹಲಿಗೆ ತೆರಳಿದ್ದು , ಇಂದು ರಾಜ್ಯಸಭಾ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಭೇಟಿ ಮಾಡಿದಾಗ ಅವರು 30 ತಿಂಗಳ ಅಧಿಕಾರ ಹಂಚಿಕೆಯ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸೂಚನೆಯಂತೆ ಕಾಂಗ್ರೆಸ್‍ಗೂ 30 ತಿಂಗಳ ಅಧಿಕಾರವನ್ನು ಬಿಟ್ಟು ಕೊಡಬೇಕೆಂಬ ಪ್ರಸ್ತಾಪವನ್ನು ಗುಲಾಂ ನಬಿ ಆಜಾದ್ ಅವರು ಕುಮಾರಸ್ವಾಮಿ ಅವರ ಮುಂದಿಟ್ಟಿದ್ದಾರೆ ಎಂದು ಹೇಳಲಾಗಿದೆ. ಮೈತ್ರಿ ಒಪ್ಪಂದದ ಸಂದರ್ಭದಲ್ಲಿ ಐದು ವರ್ಷಗಳ ಕಾಲ ಕುಮಾರಸ್ವಾಮಿ ಅವರೇ ಮುಂದುವರೆಯುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಕಾಂಗ್ರೆಸ್‍ನವರು ಅಧಿಕಾರ ಹಂಚಿಕೆಯ ಪ್ರಸ್ತಾಪವನ್ನು ಮುಂದಿಟ್ಟಿರುವುದು ತೀವ್ರ ಕುತೂಹಲ ಕೆರಳಿಸಿದೆ.   

short by Pawan / more at Eesanje

Comments